ಸ್ವಾತಂತ್ರೋತ್ಸವದ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುವ ಚಾರಿತ್ರಿಕ ಫಲ ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಪ್ರತಿಬಿಂಬಿಸುವ ವಿಶೇಷ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿದೆ.
ಆಗಸ್ಟ್ 5 ರಿಂದ 15 ರವರೆಗೂ ನಡೆಯಲಿರುವ ಫಲಪುಷ್ಪ ಪ್ರದರ್ಶನದಲ್ಲಿ ಕನ್ನಡದ ಜನ ಮಾನಸದಲ್ಲಿ ದೇವರಂತೆ ಕಂಗೊಳಿಸುತ್ತಿರುವ ವರನಟ ಡಾ.ರಾಜ್ ಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ವಿಷಯಾಧಾರಿತ ವಿಶೇಷ ಫಲಪುಷ್ಪ ಪ್ರದರ್ಶನ ಜರುಗಲಿದೆ.
ತೋಟಗಾರಿಕಾ ಇಲಾಖೆ ಅಧಿಕಾರಿಗಳು ಈಗಾಗಲೇ ದೊಡ್ಮನೆ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಪ್ರದರ್ಶನದ ವಿವರ ನೀಡಿ, ಆಹ್ವಾನ ನೀಡಿದ್ದಾರೆ.
ಆಗಸ್ಟ್ 5ರಂದು ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಗೊಳ್ಳಲಿದ್ದು, ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಈ ಸಂದರ್ಭಕ್ಕೆ ಆಹ್ವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್. ತೋಟಗಾರಿಕೆ ಜಂಟಿ ನಿರ್ದೇಶಕ ಡಾ. ಎಂ ಜಗದೀಶ್ ಹಾಗೂ ಲಾಲ್ ಬಾಗ್ ತೋಟಗಾರಿಕೆ ಉಪನಿರ್ದೇಶಕಿ ಜಿ ಕುಸುಮ ದೊಡ್ಮನೆ ಭೇಟಿ ಸಂದರ್ಭದಲ್ಲಿ ಹಾಜರಿದ್ದರು.